ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಪಟ್ಟಣದಲ್ಲಿ ಮಹಿಳಾ ಸಹೋದ್ಯೋಗಿಯನ್ನು ಆಕೆಯ ಇಚ್ಛೆಗೆ ವಿರುದ್ಧವಾಗಿ ಕಾರಿನಲ್ಲಿ ಕರೆದೊಯ್ದ ಆರೋಪದ ಹಿನ್ನೆಲೆಯಲ್ಲಿ ಮುಸ್ಲಿಂ ಯುವಕನನ್ನು ಪೊಲೀಸರು ಬಂಧಿಸಿರುವ ಘಟನೆ ವರದಿಯಾಗಿದೆ. ಪ್ರಕರಣವು ಸ್ಥಳೀಯ ಮಟ್ಟದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿದ್ದು, ಕೆಲ ಸಂಘಟನೆಗಳು ಪ್ರತಿಭಟನೆಯನ್ನೂ ನಡೆಸಿವೆ.
ಮಾಹಿತಿಯ ಪ್ರಕಾರ, ಭಟ್ಕಳದ ಖಾಸಗಿ ಸೂಪರ್ ಮಾರ್ಟ್‌ನಲ್ಲಿ ಕೆಲಸ ಮಾಡುತ್ತಿದ್ದ ಯುವತಿ ಹಾಗೂ ಸಹೋದ್ಯೋಗಿಯಾಗಿದ್ದ ಶಾಹಿದ್ ಸೈಫ್ ಖಾನ್ ನಡುವೆ ಪರಿಚಯವಿತ್ತು ಎನ್ನಲಾಗಿದೆ. ಯುವತಿಯ ದೂರಿನ ಪ್ರಕಾರ, ಆರೋಪಿ ಕಳೆದ ಕೆಲವು ದಿನಗಳಿಂದ ಆಕೆಯನ್ನು ನಿರಂತರವಾಗಿ ಸಂಪರ್ಕಿಸುತ್ತಿದ್ದ ಹಾಗೂ ಒತ್ತಡ ಹೇರುತ್ತಿದ್ದ ಎಂದು ಆರೋಪಿಸಲಾಗಿದೆ.
ಜೂನ್ 17ರಂದು ಮಾತನಾಡಬೇಕಿದೆ ಎಂದು ಹೇಳಿ ಯುವತಿಯನ್ನು ಸೂಪರ್ ಮಾರ್ಟ್ ಹಿಂಭಾಗದ ಪ್ರದೇಶಕ್ಕೆ ಕರೆಸಿಕೊಂಡಿದ್ದ ಆರೋಪಿ, ಬಳಿಕ ಆಕೆಯನ್ನು ಕಾರಿನಲ್ಲಿ ಕೂರಿಸಿಕೊಂಡು ಕಾಡು ಪ್ರದೇಶದತ್ತ ಕರೆದೊಯ್ದಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಮಾರುಕೇರಿ ಭಾಗದ ಕಡೆಗೆ ಅನುಮಾನಾಸ್ಪದವಾಗಿ ಸಂಚರಿಸುತ್ತಿದ್ದ ಕಾರನ್ನು ಸ್ಥಳೀಯರು ತಡೆದಿದ್ದು, ಬಳಿಕ ಯುವತಿ ತನ್ನನ್ನು ಇಚ್ಛೆಗೆ ವಿರುದ್ಧವಾಗಿ ಕರೆದೊಯ್ಯಲಾಗಿದೆ ಹಾಗೂ ಕಿರುಕುಳ ನೀಡಲು ಯತ್ನಿಸಲಾಗಿದೆ ಎಂದು ಪೊಲೀಸರಿಗೆ ದೂರು ನೀಡಿದ್ದಾಳೆ ಎಂದು ತಿಳಿದುಬಂದಿದೆ.
ಪ್ರಕರಣದ ಆರಂಭಿಕ ಹಂತದಲ್ಲಿ ಪೊಲೀಸರು ಸೂಕ್ತ ಕ್ರಮ ಕೈಗೊಂಡಿಲ್ಲ ಎಂಬ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಬಿಜೆಪಿ ಹಾಗೂ ಕೆಲವು ಹಿಂದೂ ಸಂಘಟನೆಗಳ ಕಾರ್ಯಕರ್ತರು ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.
ಬಳಿಕ ಯುವತಿಯ ಲಿಖಿತ ದೂರಿನ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿ ಆರೋಪಿ ಶಾಹಿದ್ ಸೈಫ್ ಖಾನ್ ಅವರನ್ನು ಬಂಧಿಸಿದ್ದಾರೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಪ್ರಕರಣದ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದು, ಎಲ್ಲ ಆಯಾಮಗಳನ್ನು ಪರಿಶೀಲಿಸಿ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
