ಹಳಿಯಾಳ: ಸುಲಿಗೆ ಹಾಗೂ ಹಲ್ಲೆ ಪ್ರಕರಣದಲ್ಲಿ ಭಾಗಿಯಾಗಿ ಕಳೆದ ಮೂರು ವರ್ಷಗಳಿಂದ ಪೊಲೀಸರ ಕಣ್ಣಿಗೆ ಮಣ್ಣೆರಚಿ ತಲೆಮರೆಸಿಕೊಂಡಿದ್ದ ಕುಖ್ಯಾತ ರೌಡಿಶೀಟರ್ನ್ನು ಹಳಿಯಾಳ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತ ಆರೋಪಿಯನ್ನು ಹಳಿಯಾಳ ತಾಲೂಕಿನ ತತ್ವಣಗಿ ಹೊಸೂರು ಗ್ರಾಮದ ಕೃಷ್ಣಾ ಮಾರುತಿ ಹುಲಸ್ವಾರ ಎಂದು ಗುರುತಿಸಲಾಗಿದೆ. ಈತನ ವಿರುದ್ಧ ಹಳಿಯಾಳ ಪೊಲೀಸ್ ಠಾಣೆಯಲ್ಲಿ ಒಟ್ಟು ಏಳು ಪ್ರಕರಣಗಳು ದಾಖಲಾಗಿದ್ದು, ರೌಡಿಶೀಟರ್ ಪಟ್ಟಿಯಲ್ಲಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
2021ರ ಮಾರ್ಚ್ 27ರಂದು ತತ್ವಣಗಿ ಗ್ರಾಮದ ಹೊಸೂರು ಪ್ರದೇಶದಲ್ಲಿ ಸಿಮೆಂಟ್ ರಸ್ತೆ ಕಾಮಗಾರಿ ನಡೆಯುತ್ತಿದ್ದ ವೇಳೆ, ಅಲ್ಲಿ ಕೆಲಸ ಮಾಡುತ್ತಿದ್ದ ರಾಜು ಶಿವಾಜಿ ಡಾಂಗೆ ಎಂಬುವವರ ಬಳಿ ತೆರಳಿದ ಆರೋಪಿ, “ರಸ್ತೆ ಕೆಲಸ ಮಾಡುತ್ತಿದ್ದೀರಾ, ನಮಗೂ ಹಣ ಕೊಡಬೇಕು” ಎಂದು ಹಣಕ್ಕೆ ಒತ್ತಾಯಿಸಿದ್ದಾನೆ ಎನ್ನಲಾಗಿದೆ. ಹಣ ನೀಡಲು ನಿರಾಕರಿಸಿದ ಹಿನ್ನೆಲೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿದ್ದಲ್ಲದೆ, ಮೊಬೈಲ್ ಕಸಿದುಕೊಂಡು ಜೀವ ಬೆದರಿಕೆ ಹಾಕಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಈ ಸಂಬಂಧ ಹಳಿಯಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಪೂರ್ಣಗೊಳಿಸಿದ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರ ಸಲ್ಲಿಸಿದ್ದರು. ಆದರೆ ಆರೋಪಿ ನ್ಯಾಯಾಲಯಕ್ಕೆ ಹಾಜರಾಗದೆ ಮೂರು ವರ್ಷಗಳಿಂದ ತಲೆಮರೆಸಿಕೊಂಡಿದ್ದರಿಂದ ಜೆಎಂಎಫ್ಸಿ ನ್ಯಾಯಾಲಯವು ದಸ್ತಗಿರಿ ವಾರಂಟ್ ಜಾರಿಗೊಳಿಸಿತ್ತು.
ಆರೋಪಿಯ ಬಂಧನಕ್ಕಾಗಿ ವಿಶೇಷ ತಂಡ ರಚಿಸಿದ್ದ ಹಳಿಯಾಳ ಪೊಲೀಸರು ಖಚಿತ ಮಾಹಿತಿಯ ಮೇರೆಗೆ ಮಹಾರಾಷ್ಟ್ರ ಸೇರಿದಂತೆ ವಿವಿಧ ಸ್ಥಳಗಳಲ್ಲಿ ಶೋಧ ಕಾರ್ಯ ನಡೆಸಿದ್ದರು. ಸತತ ಎರಡು ದಿನಗಳ ಕಾರ್ಯಾಚರಣೆ ಬಳಿಕ ಮೇ 22ರಂದು ತತ್ವಣಗಿ ಗ್ರಾಮದ ಸಂಬಂಧಿಕರ ಮನೆಯಲ್ಲಿ ಅಡಗಿದ್ದ ಆರೋಪಿಯನ್ನು ಬಂಧಿಸಲಾಯಿತು.
ಬಂಧಿತ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಉತ್ತರ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕ ದೀಪನ್ ಎಂ.ಎನ್ (ಐಪಿಎಸ್), ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಕೃಷ್ಣಮೂರ್ತಿ ಹಾಗೂ ಜಗದೀಶ ನಾಯ್ಕ, ದಾಂಡೇಲಿ ಡಿವೈಎಸ್ಪಿ ಶಿವಾನಂದ ಮದರಕಂಡಿ ಮತ್ತು ಹಳಿಯಾಳ ಸಿಪಿಐ ಜಯಪಾಲ್ ಪಾಟೀಲ್ ಅವರ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆದಿದೆ.
ಪಿಎಸ್ಐ ಬಸವರಾಜ ಮಬನೂರ ಹಾಗೂ ಕೃಷ್ಣಾ ಅರಕೇರಿ ನೇತೃತ್ವದ ತಂಡದಲ್ಲಿ ಎಎಸ್ಐ ವೆಂಕಟೇಶ ತೆಗ್ಗಿನ, ಮಹಮದ್ ಹನೀಫ್, ಅರವಿಂದ ಭಜಂತ್ರಿ, ಯೋಗೇಶ್ ಗೌಡ, ಶ್ರೀಶೈಲ್ ಜಿ.ಎಂ., ವಿನೋದ್ ಜಿ.ಬಿ., ರಾಘವೇಂದ್ರ ಹಾಗೂ ಶಬಾನಾ ಪಾಟೀಲ್ ಅವರು ಭಾಗವಹಿಸಿದ್ದರು.
ಯಶಸ್ವಿ ಕಾರ್ಯಾಚರಣೆಗೆ ಜಿಲ್ಲಾ ಪೊಲೀಸ್ ಅಧೀಕ್ಷಕರು ಪೊಲೀಸ್ ತಂಡವನ್ನು ಶ್ಲಾಘಿಸಿದ್ದಾರೆ.
