ಕಾರವಾರ: ಸ್ನೇಹಿತನ ಅಪಘಾತಕ್ಕೀಡಾದ ಬೈಕ್‌ನ್ನು ಬಿಡುಗಡೆ ಮಾಡಿಸಿಕೊಳ್ಳಲು ಪೊಲೀಸ್ ಠಾಣೆಗೆ ತೆರಳಿದ್ದ 18 ವರ್ಷದ ಯುವತಿಗೆ, ಠಾಣೆಯ ಇಬ್ಬರು ಪೊಲೀಸ್ ಸಿಬ್ಬಂದಿ ಮೊಬೈಲ್ ಸಂಖ್ಯೆಯನ್ನು ದುರ್ಬಳಕೆ ಮಾಡಿಕೊಂಡು ಅಶ್ಲೀಲ ಸಂದೇಶಗಳು ಹಾಗೂ ಕರೆಗಳ ಮೂಲಕ ಕಿರುಕುಳ ನೀಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಸಂಬಂಧ ಕಾರವಾರ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಆರಂಭಿಸಲಾಗಿದೆ.

ದೂರುದಾರೆಯ ಪ್ರಕಾರ, ಜುಲೈ 4ರಂದು ಬೈಕ್ ಬಿಡುಗಡೆಗೆ ಸಂಬಂಧಿಸಿದ ಪ್ರಕ್ರಿಯೆಗಾಗಿ ದಾಂಡೇಲಿ ಪೊಲೀಸ್ ಠಾಣೆಗೆ ತೆರಳಿದ ವೇಳೆ ಆಡಳಿತಾತ್ಮಕ ಕಾರಣಕ್ಕಾಗಿ ಠಾಣೆಯ ಸಿಬ್ಬಂದಿ ಅವರ ಮೊಬೈಲ್ ಸಂಖ್ಯೆಯನ್ನು ಪಡೆದಿದ್ದರು. ನಂತರ ಅಪರಿಚಿತ ಸಂಖ್ಯೆಯಿಂದ ನಿರಂತರ ಕರೆಗಳು ಹಾಗೂ ವಾಟ್ಸಪ್ ಸಂದೇಶಗಳು ಬರಲಾರಂಭಿಸಿದ್ದವು ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಈ ಸಂದೇಶಗಳನ್ನು ಠಾಣೆಯ ಸಿಬ್ಬಂದಿಯಾಗಿರುವ ಮಹಂತೇಶ್ ಹಾಗೂ ಇಮ್ರಾನ್ ಕಳುಹಿಸಿದ್ದಾರೆ ಎಂದು ಆರೋಪಿಸಿರುವ ಯುವತಿ, ಅಸಭ್ಯವಾಗಿ ಮಾತನಾಡುವುದರ ಜೊತೆಗೆ ಲಾಡ್ಜ್‌ಗೆ ಬರಲು ಒತ್ತಾಯಿಸಿದ್ದರು ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಘಟನೆಯ ಬಗ್ಗೆ ಆರಂಭದಲ್ಲಿ ದಾಂಡೇಲಿ ಪೊಲೀಸ್ ಠಾಣೆಯಲ್ಲೇ ದೂರು ನೀಡಿದ್ದರೂ ಯಾವುದೇ ಕ್ರಮ ಕೈಗೊಳ್ಳಲಿಲ್ಲ ಎಂದು ಆರೋಪಿಸಿರುವ ಯುವತಿ, ಬಳಿಕ ಕಾರವಾರ ಜಿಲ್ಲಾ ಪೊಲೀಸ್ ಅಧೀಕ್ಷಕರನ್ನು ಭೇಟಿ ಮಾಡಿ ದೂರು ಸಲ್ಲಿಸಿದ್ದಾರೆ. ಇದರ ಬೆನ್ನಲ್ಲೇ ಮಹಿಳಾ ಪೊಲೀಸ್ ಠಾಣೆಯಲ್ಲಿ ಅಧಿಕೃತವಾಗಿ ಪ್ರಕರಣ ದಾಖಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿತ ಸಿಬ್ಬಂದಿಯನ್ನು ವಿಚಾರಣೆಗೆ ಒಳಪಡಿಸಲಾಗಿದ್ದು, ಅವರು ಕೊಂಕಣಿ ಭಾಷೆಯಲ್ಲಿಯೂ ಕೆಲವು ಸಂದೇಶಗಳನ್ನು ಕಳುಹಿಸಿದ್ದಾರೆ ಎಂಬ ಆರೋಪದ ಬಗ್ಗೆಯೂ ತನಿಖೆ ನಡೆಯುತ್ತಿದೆ ಎಂದು ತಿಳಿದುಬಂದಿದೆ.

ಪ್ರಕರಣದ ತನಿಖೆ ಮುಂದುವರಿದಿದ್ದು, ತನಿಖೆ ಪೂರ್ಣಗೊಂಡ ಬಳಿಕವೇ ಆರೋಪಗಳ ಸತ್ಯಾಸತ್ಯತೆ ಸ್ಪಷ್ಟವಾಗಲಿದೆ ಎಂದು ಪೊಲೀಸ್ ಇಲಾಖೆ ತಿಳಿಸಿದೆ.

Related News

error: Content is protected !!