ಸಾಗರ ತಾಲೂಕಿನ ಅಡ್ಡೇರಿ ಗ್ರಾಮದಲ್ಲಿ ರೈತರ ಬೆಳೆ ನಾಶಪಡಿಸಿದ ಅರಣ್ಯ ಇಲಾಖೆಯ ಕ್ರಮ ಖಂಡಿಸಿ ಬಿಜೆಪಿ ಕಾರ್ಯಕರ್ತರು ಅರಣ್ಯ ಇಲಾಖೆ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಶರಾವತಿ ಮುಳುಗಡೆ ಸಂತ್ರಸ್ತೆ ಸುಜಾತ ಅವರ ಜಮೀನಿನಲ್ಲಿ ಬೆಳೆದಿದ್ದ ಅಡಿಕೆ ಸೇರಿದಂತೆ ವಿವಿಧ ಬೆಳೆಗಳನ್ನು ಅಧಿಕಾರಿಗಳು ನಾಶಪಡಿಸಿರುವುದಾಗಿ ಆರೋಪಿಸಲಾಗಿದೆ.
ಪ್ರತಿಭಟನಾಕಾರರು ಶಾಸಕ ಹಾಗೂ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು. ಯಾವುದೇ ಪೂರ್ವ ಸೂಚನೆ ನೀಡದೆ ಬೆಳೆ ನಾಶ ಮಾಡಲಾಗಿದೆ ಎಂದು ರೈತರು ದೂರಿದರು.
ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಮಲ್ಲಿಕಾರ್ಜುನ ಹಕ್ರೆ ಮಾತನಾಡಿ, ಹಲವು ದಶಕಗಳಿಂದ ಈ ಭಾಗದಲ್ಲಿ ಕೃಷಿ ಮಾಡಿಕೊಂಡು ಬದುಕುತ್ತಿರುವ ಕುಟುಂಬಗಳ ಮೇಲೆ ಅರಣ್ಯ ಇಲಾಖೆ ದೌರ್ಜನ್ಯ ನಡೆಸುತ್ತಿದೆ ಎಂದು ಆರೋಪಿಸಿದರು. ಈಗಾಗಲೇ ಬಗರ್ಹುಕುಂ ಅಡಿಯಲ್ಲಿ ಅರ್ಜಿ ಸಲ್ಲಿಸಿರುವ ಜಮೀನಿನಲ್ಲಿ ಬೆಳೆ ನಾಶ ಮಾಡಿರುವುದು ಸರಿಯಲ್ಲ ಎಂದು ಹೇಳಿದರು.
ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ರತ್ನಾಕರ ಹೊನಗೋಡು, ಸಾಲ ಮಾಡಿ ಬೆಳೆದ ಅಡಿಕೆ ಸಸಿಗಳನ್ನು ನಾಶಪಡಿಸಿರುವುದರಿಂದ ರೈತ ಕುಟುಂಬ ಸಂಕಷ್ಟಕ್ಕೆ ಸಿಲುಕಿದೆ ಎಂದು ಆತಂಕ ವ್ಯಕ್ತಪಡಿಸಿದರು. ಪ್ರಕರಣದ ತನಿಖೆಗೆ ವಿಶೇಷ ತಂಡ ರಚಿಸಿರುವುದಾಗಿ ಸಾಗರ ಡಿಎಫ್ಓ ತಿಳಿಸಿದ್ದಾರೆ. ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ಹೋರಾಟ ಮುಂದುವರಿಸುವುದಾಗಿ ಬಿಜೆಪಿ ಮುಖಂಡರು ಎಚ್ಚರಿಕೆ ನೀಡಿದ್ದಾರೆ.
