ಕೊಲ್ಕತ್ತಾ ಸಮೀಪದ ಬರುಯಿಪುರದಲ್ಲಿ 11 ವರ್ಷದ ಅಪ್ರಾಪ್ತ ಬಾಲಕಿಯ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಪ್ರಮುಖ ಆರೋಪಿ ಪ್ರಭಾಸ್ ಮೊಂಡಲ್ ಪೊಲೀಸ್ ಎನ್‌ಕೌಂಟರ್‌ನಲ್ಲಿ ಸಾವನ್ನಪ್ಪಿದ್ದಾನೆ. ಮಂಗಳವಾರ ತಡರಾತ್ರಿ ಈ ಘಟನೆ ನಡೆದಿರುವುದಾಗಿ ಪೊಲೀಸ್ ಮೂಲಗಳು ತಿಳಿಸಿವೆ.
ಪ್ರಕರಣದ ತನಿಖೆಯ ಭಾಗವಾಗಿ ಪೊಲೀಸರು ಆರೋಪಿ ಪ್ರಭಾಸ್ ಮೊಂಡಲ್‌ನನ್ನು ಮಹಜರು (ಕ್ರೈಮ್ ಸೀನ್ ಮರುನಿರ್ಮಾಣ) ನಡೆಸಲು ಘಟನಾ ಸ್ಥಳಕ್ಕೆ ಕರೆದೊಯ್ದಿದ್ದರು. ಈ ವೇಳೆ ಪೊಲೀಸರ ಕಣ್ತಪ್ಪಿಸಿ ಪರಾರಿಯಾಗಲು ಯತ್ನಿಸಿದ ಆತ, ಅಲ್ಲಿದ್ದ ಅಧಿಕಾರಿಯೊಬ್ಬರ ಪಿಸ್ತೂಲನ್ನು ಕಸಿದುಕೊಳ್ಳಲು ಮುಂದಾಗಿದ್ದಾನೆ ಎನ್ನಲಾಗಿದೆ.
ಈ ಸಂದರ್ಭದಲ್ಲಿ ಆತ್ಮರಕ್ಷಣೆಗಾಗಿ ಪೊಲೀಸರು ಗುಂಡು ಹಾರಿಸಿದ್ದು, ಗುಂಡೇಟಿನಿಂದ ಆರೋಪಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
11 ವರ್ಷದ ಬಾಲಕಿಯ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ಪಶ್ಚಿಮ ಬಂಗಾಳದಲ್ಲಿ ಭಾರೀ ಆಕ್ರೋಶಕ್ಕೆ ಕಾರಣವಾಗಿತ್ತು. ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ಪೊಲೀಸರು ತನಿಖೆಯನ್ನು ತೀವ್ರಗೊಳಿಸಿ ಮುಖ್ಯ ಆರೋಪಿಯನ್ನು ಬಂಧಿಸಿದ್ದರು. ಇದೀಗ ಆರೋಪಿ ಎನ್‌ಕೌಂಟರ್‌ನಲ್ಲಿ ಸಾವನ್ನಪ್ಪಿರುವ ಹಿನ್ನೆಲೆಯಲ್ಲಿ ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆ ಮುಂದುವರಿದಿದೆ.
