ಯಲ್ಲಾಪುರ: ತಾಲೂಕಿನ ಹುಟ್ಕಮನ ಗ್ರಾಮದಲ್ಲಿ ಚಾಕು ತೋರಿಸಿ ಮನೆಯವರನ್ನು ಬೆದರಿಸಿ ಒಂಟಿಮನೆ ದರೋಡೆ ನಡೆಸಿದ್ದ ಪ್ರಕರಣವನ್ನು ಯಲ್ಲಾಪುರ ಪೊಲೀಸರು ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಬಂಧಿಸಿದ್ದು, ಕಳವು ಮಾಡಿದ್ದ ವಸ್ತುಗಳು ಹಾಗೂ ಕೃತ್ಯಕ್ಕೆ ಬಳಸಿದ್ದ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ.

ನವೆಂಬರ್ 5ರಂದು ರಾತ್ರಿ ಸುಮಾರು 8.30ರ ವೇಳೆಗೆ ಹುಟ್ಕಮನ ಗ್ರಾಮದ ಮೂಲೆಗುಂಡ್ಲಲ್ ನಿವಾಸಿ ರಾಮಚಂದ್ರ ಮಹಾಬಲೇಶ್ವರ ಭಟ್ಟ (63) ಅವರ ಮನೆಗೆ ನುಗ್ಗಿದ್ದ ದರೋಡೆಕೋರರು, ಮನೆಯ ಬಾಗಿಲು ಮುರಿದು ಒಳಪ್ರವೇಶಿಸಿದ್ದರು. ಬಳಿಕ ಮನೆಯವರಿಗೆ ಚಾಕು ತೋರಿಸಿ ಜೀವ ಬೆದರಿಕೆ ಹಾಕಿ, ಮನೆಯಲ್ಲಿದ್ದ ಚಿನ್ನಾಭರಣ, ಬೆಳ್ಳಿ ವಸ್ತುಗಳು, ಮೊಬೈಲ್ ಫೋನ್‌ಗಳು, ನಗದು ಹಣ ಸೇರಿದಂತೆ ಹಲವು ಬೆಲೆಬಾಳುವ ವಸ್ತುಗಳನ್ನು ದೋಚಿ ಪರಾರಿಯಾಗಿದ್ದರು. ಅಷ್ಟೇ ಅಲ್ಲದೆ, ಮನೆಯಲ್ಲಿದ್ದ ಟಿವಿಎಸ್ ಅಪಾಚೆ ಬೈಕ್‌ನ್ನೂ ಕೊಂಡೊಯ್ದಿದ್ದರು.

ದರೋಡೆಕೋರರು ಸುಮಾರು 20 ಗ್ರಾಂ ತೂಕದ ಬಂಗಾರದ ಕರಿಮಣಿ ಸರ, 10 ಗ್ರಾಂ ತೂಕದ ಎರಡು ಬಂಗಾರದ ಬಳೆಗಳು, 12 ಗ್ರಾಂ ತೂಕದ ಎರಡು ಜೊತೆ ಕಿವಿಯೋಲೆಗಳು, ಉಂಗುರ, ಲಾಕೆಟ್, ಎರಡು ಬೆಳ್ಳಿಯ ಬಟ್ಟಲುಗಳು, ಎರಡು ಕೈಗಡಿಯಾರಗಳು, ಸ್ಯಾಮ್‌ಸಂಗ್ ಮತ್ತು ವಿವೋ ಕಂಪನಿಯ ಮೊಬೈಲ್‌ಗಳು ಹಾಗೂ ₹12 ಸಾವಿರ ನಗದು ಹಣವನ್ನು ದೋಚಿದ್ದರು.

ಈ ಸಂಬಂಧ ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗುತ್ತಿದ್ದಂತೆ ಪೊಲೀಸರು ತನಿಖೆ ಕೈಗೊಂಡಿದ್ದರು. ನವೆಂಬರ್ 9ರಂದು ಖಚಿತ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿದ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ. ವಿಚಾರಣೆ ವೇಳೆ ಆರೋಪಿಗಳು ದರೋಡೆ ಕೃತ್ಯದಲ್ಲಿ ಭಾಗಿಯಾಗಿರುವುದನ್ನು ಒಪ್ಪಿಕೊಂಡಿದ್ದಾರೆ ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ.

ಬಂಧಿತರನ್ನು ಬೆಳಗಾವಿಯ ನ್ಯೂ ಗಾಂಧಿನಗರದ ಹಸನ್‌ಸಾಬ ರಾಜೇಸಾಬ ಅಮೀನಗಡ (48) ಹಾಗೂ ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮದ ಮುಬಾರಕ್ ಮಾಸಿಮ್ ಮಕಾನದಾರ (26), ಮಹಮ್ಮದ್ ಖಾಸಿಂ ಸುಭಾನಿ ದಂಡಿನವರ (38) ಮತ್ತು ಅಬ್ಬಾಸಅಲಿ ಫೀರಸಾಬ ಮಕಾನದಾರ (50) ಎಂದು ಗುರುತಿಸಲಾಗಿದೆ.

ಆರೋಪಿಗಳಿಂದ ಕೃತ್ಯಕ್ಕೆ ಬಳಸಿದ್ದ ಬಿಳಿ ಬಣ್ಣದ ಫೋರ್ಡ್ ಕಾರು, ಹೀರೋ ಮೋಟಾರ್ ಸೈಕಲ್, ದರೋಡೆಗೊಳಗಾದ ಟಿವಿಎಸ್ ಅಪಾಚೆ ಬೈಕ್, ಎರಡು ಮೊಬೈಲ್ ಫೋನ್‌ಗಳು ಸೇರಿದಂತೆ ಇತರೆ ಕಳವು ವಸ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಉತ್ತರ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕ ದೀಪನ್ ಎಂ.ಎನ್. ಐಪಿಎಸ್, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕೃಷ್ಣಮೂರ್ತಿ ಹಾಗೂ ಶಿರಸಿ ಉಪವಿಭಾಗದ ಡಿವೈಎಸ್ಪಿ ಗೀತಾ ಪಾಟೀಲ ಅವರ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆದಿದೆ. ಯಲ್ಲಾಪುರ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ಸುರೇಶ ಜಿ. ಕುಂಬಾರ ಹಾಗೂ ಗೋಕರ್ಣ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ಶ್ರೀಧರ ಎಸ್.ಆರ್. ಅವರ ನೇತೃತ್ವದಲ್ಲಿ ಪೊಲೀಸ್ ತಂಡ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.

ಪಿಎಸ್‌ಐಗಳಾದ ರಾಜಶೇಖರ ವಂದಲಿ, ಸಿದ್ದಪ್ಪ ಗುಡಿ, ಮಹಾವೀರ ಕಾಂಬಳೆ, ಗಣಪತಿ ಆರ್. ಶೇರುಗಾರ ಸೇರಿದಂತೆ ವಿವಿಧ ಪೊಲೀಸ್ ಠಾಣೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು. ಕಾರವಾರದ ತಾಂತ್ರಿಕ ವಿಭಾಗದ ಉದಯ ಗುನಗ ಹಾಗೂ ಬಬನ್ ಕದಂ ತಾಂತ್ರಿಕ ನೆರವು ಒದಗಿಸಿದ್ದರು.

ಒಂಟಿಮನೆ ದರೋಡೆ ಪ್ರಕರಣವನ್ನು ತ್ವರಿತವಾಗಿ ಭೇದಿಸಿ ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾದ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಯ ಕಾರ್ಯಕ್ಷಮತೆಯನ್ನು ಜಿಲ್ಲಾ ಪೊಲೀಸ್ ಅಧೀಕ್ಷಕರು ಶ್ಲಾಘಿಸಿ ಅಭಿನಂದಿಸಿದ್ದಾರೆ.

Related News

error: Content is protected !!