ಬೆಂಗಳೂರು: ನಟಿ ರುಕ್ಮಿಣಿ ವಸಂತ್ ಅವರ ಫೋಟೋಗಳನ್ನು ದುರ್ಬಳಕೆ ಮಾಡಿಕೊಂಡು ಎಐ ತಂತ್ರಜ್ಞಾನದ ಮೂಲಕ ಅಶ್ಲೀಲ ಡೀಪ್‌ಫೇಕ್ ಫೋಟೋ ಹಾಗೂ ವಿಡಿಯೋಗಳನ್ನು ಸೃಷ್ಟಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸೈಬರ್ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
ಇತ್ತೀಚೆಗೆ ರುಕ್ಮಿಣಿ ವಸಂತ್ ಅವರ ಹೆಸರಿನಲ್ಲಿ ಹರಿದಾಡುತ್ತಿದ್ದ ನಕಲಿ ಹಾಗೂ ಅಶ್ಲೀಲ ಡೀಪ್‌ಫೇಕ್ ಚಿತ್ರಗಳು ಮತ್ತು ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದವು. ಈ ಸಂಬಂಧ ನಟಿ ಪೊಲೀಸರಿಗೆ ದೂರು ನೀಡಿದ ಬಳಿಕ ಸೈಬರ್ ಪೊಲೀಸರು ತನಿಖೆ ಕೈಗೊಂಡಿದ್ದರು.
ತನಿಖೆ ವೇಳೆ ಬಾಗಲಕೋಟೆಯ ರವಿಕುಮಾರ್, ಬೆಂಗಳೂರಿನ ರಂಜಿತ್ ಕುಮಾರ್ ಹಾಗೂ ತೀರ್ಥಹಳ್ಳಿಯ ಚಂದ್ರಕಾಂತ್ ಎಂಬ ಮೂವರನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ. ಆರೋಪಿಗಳ ಶೈಕ್ಷಣಿಕ ಹಾಗೂ ವೃತ್ತಿಪರ ಹಿನ್ನೆಲೆ ತಿಳಿದು ತನಿಖಾಧಿಕಾರಿಗಳೇ ಅಚ್ಚರಿ ವ್ಯಕ್ತಪಡಿಸಿದ್ದಾರೆ.
ಬಂಧಿತರಲ್ಲಿ ರವಿಕುಮಾರ್ ಬಿಎಸ್‌ಸಿ ನರ್ಸಿಂಗ್ ವಿದ್ಯಾರ್ಥಿಯಾಗಿದ್ದು, ತನ್ನದೇ ಯೂಟ್ಯೂಬ್ ಚಾನೆಲ್ ನಡೆಸುತ್ತಿದ್ದ ಎನ್ನಲಾಗಿದೆ. ಹೆಚ್ಚಿನ ವೀಕ್ಷಣೆಗಳು ಹಾಗೂ ಆದಾಯ ಗಳಿಸುವ ಉದ್ದೇಶದಿಂದ ಡೀಪ್‌ಫೇಕ್ ವಿಡಿಯೋಗಳನ್ನು ಸೃಷ್ಟಿಸಿ ಅಪ್‌ಲೋಡ್ ಮಾಡುತ್ತಿದ್ದ ಎಂದು ತನಿಖೆಯಲ್ಲಿ ಬೆಳಕಿಗೆ ಬಂದಿದೆ.
ಇನ್ನೊಬ್ಬ ಆರೋಪಿ ರಂಜಿತ್ ಕುಮಾರ್ ಸಾಫ್ಟ್‌ವೇರ್ ಇಂಜಿನಿಯರ್ ಆಗಿದ್ದು, ವಾರ್ಷಿಕ ಸುಮಾರು ₹20 ಲಕ್ಷ ಸಂಬಳ ಪಡೆಯುತ್ತಿದ್ದಾನೆ ಎನ್ನಲಾಗಿದೆ. ಕೇವಲ ಮನರಂಜನೆ ಹಾಗೂ ಕುತೂಹಲಕ್ಕಾಗಿ ಎಐ ತಂತ್ರಜ್ಞಾನ ಬಳಸಿ ಡೀಪ್‌ಫೇಕ್ ವಿಡಿಯೋಗಳನ್ನು ಸೃಷ್ಟಿಸಿದ್ದಾಗಿ ಆತ ವಿಚಾರಣೆ ವೇಳೆ ಒಪ್ಪಿಕೊಂಡಿದ್ದಾನೆ ಎಂದು ಮೂಲಗಳು ತಿಳಿಸಿವೆ.
ಮೂರನೇ ಆರೋಪಿ ಚಂದ್ರಕಾಂತ್ ಪ್ರತಿಷ್ಠಿತ ಚಾರ್ಟರ್ಡ್ ಅಕೌಂಟೆನ್ಸಿ ಸಂಸ್ಥೆಯಲ್ಲಿ ಉದ್ಯೋಗಿಯಾಗಿದ್ದು, ವಿಕೃತ ಮನರಂಜನೆಗಾಗಿ ಈ ಕೃತ್ಯದಲ್ಲಿ ಭಾಗಿಯಾಗಿದ್ದಾನೆ ಎಂಬ ಆರೋಪ ಕೇಳಿಬಂದಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳು ಬಳಸಿದ್ದ ಮೂರು ದುಬಾರಿ ಮೊಬೈಲ್ ಫೋನ್‌ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಹೆಚ್ಚಿನ ತನಿಖೆಗಾಗಿ ಪೊಲೀಸ್ ವಶಕ್ಕೆ ಪಡೆಯಲಾಗಿದೆ.
ತಂತ್ರಜ್ಞಾನವನ್ನು ದುರುಪಯೋಗಪಡಿಸಿಕೊಂಡು ವ್ಯಕ್ತಿಗಳ ಗೌರವ ಮತ್ತು ಖಾಸಗಿತನಕ್ಕೆ ಧಕ್ಕೆ ಉಂಟುಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸೈಬರ್ ಪೊಲೀಸರು ಎಚ್ಚರಿಕೆ ನೀಡಿದ್ದಾರೆ. ಈ ಪ್ರಕರಣವು ಸಾಮಾಜಿಕ ಜಾಲತಾಣಗಳಲ್ಲಿ ನಡೆಯುವ ಸೈಬರ್ ಅಪರಾಧಗಳ ವಿರುದ್ಧ ಜಾಗೃತಿಯ ಅಗತ್ಯವನ್ನು ಮತ್ತೊಮ್ಮೆ ನೆನಪಿಸಿದೆ.
