ಯಲ್ಲಾಪುರ: ಮಹಾರಾಷ್ಟ್ರದ ಕೊಲ್ಲಾಪುರ, ಸೊಲ್ಲಾಪುರ, ಪುಣೆ ಹಾಗೂ ಮುಂಬೈ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಎಲ್ಲಾ ಅಗತ್ಯ ದಾಖಲೆಗಳನ್ನು ಹೊಂದಿದ್ದ ಅಡಿಕೆ ಸಾಗಾಟದ ಲಾರಿಗಳನ್ನು ಆಹಾರ ಸುರಕ್ಷತಾ ನಿಯಮಗಳ ಉಲ್ಲಂಘನೆ ಎಂಬ ಕಾರಣ ನೀಡಿ ವಶಪಡಿಸಿಕೊಳ್ಳುತ್ತಿರುವ ಕ್ರಮವನ್ನು ಶಾಸಕ ಶಿವರಾಮ ಹೆಬ್ಬಾರ್ ತೀವ್ರವಾಗಿ ಖಂಡಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ಉತ್ತರ ಕನ್ನಡ, ಶಿವಮೊಗ್ಗ ಸೇರಿದಂತೆ ರಾಜ್ಯದ ಹಲವಾರು ಜಿಲ್ಲೆಗಳ ಅಡಿಕೆ ಬೆಳೆಗಾರರು ಕಳೆದ ಎರಡು ವರ್ಷಗಳಿಂದ ಎಲ್ಲೆಚುಕ್ಕೆ ರೋಗದ ಹಾವಳಿಯಿಂದಾಗಿ ಭಾರೀ ನಷ್ಟ ಅನುಭವಿಸುತ್ತಿದ್ದಾರೆ. ಉತ್ಪಾದನೆ ಕುಸಿತ, ಬೆಳೆ ಹಾನಿ ಹಾಗೂ ಆರ್ಥಿಕ ಸಂಕಷ್ಟದಿಂದ ಬಳಲುತ್ತಿರುವ ರೈತರಿಗೆ ಈ ಬೆಳವಣಿಗೆ ಮತ್ತಷ್ಟು ಸಂಕಷ್ಟ ಉಂಟುಮಾಡಿದೆ ಎಂದು ಹೇಳಿದ್ದಾರೆ.

ಕಾನೂನುಬದ್ಧ ದಾಖಲೆಗಳೊಂದಿಗೆ ಸಾಗಾಟ ಮಾಡಲಾಗುತ್ತಿರುವ ಅಡಿಕೆ ಲಾರಿಗಳನ್ನು ವಶಪಡಿಸಿಕೊಳ್ಳುತ್ತಿರುವುದರಿಂದ ರೈತರು ಮತ್ತು ವ್ಯಾಪಾರಸ್ಥರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಇದರಿಂದ ಅಡಿಕೆ ಮಾರುಕಟ್ಟೆಯ ಮೇಲೂ ದುಷ್ಪರಿಣಾಮ ಬೀಳುವ ಸಾಧ್ಯತೆ ಇದ್ದು, ರೈತರಿಗೆ ತಮ್ಮ ಉತ್ಪನ್ನಕ್ಕೆ ಸಮರ್ಪಕ ಬೆಲೆ ದೊರೆಯದ ಪರಿಸ್ಥಿತಿ ಉಂಟಾಗಬಹುದು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಅಡಿಕೆ ಬೆಳೆಗಾರರ ಜೀವನಾಧಾರಕ್ಕೆ ಧಕ್ಕೆ ತರುವ ಇಂತಹ ಕ್ರಮಗಳನ್ನು ತಕ್ಷಣವೇ ನಿಲ್ಲಿಸಬೇಕು. ಕೇಂದ್ರ ಹಾಗೂ ಮಹಾರಾಷ್ಟ್ರ ಸರ್ಕಾರಗಳು ರೈತರ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಸಮಸ್ಯೆಗೆ ಶೀಘ್ರ ಪರಿಹಾರ ಕಂಡುಕೊಳ್ಳಬೇಕು ಎಂದು ಹೆಬ್ಬಾರ್ ಒತ್ತಾಯಿಸಿದ್ದಾರೆ.

ರಾಜ್ಯದ ಲಕ್ಷಾಂತರ ಅಡಿಕೆ ಬೆಳೆಗಾರರ ಹಿತಾಸಕ್ತಿಗೆ ಧಕ್ಕೆಯುಂಟುಮಾಡುವ ಈ ವಿಚಾರದಲ್ಲಿ ಸರ್ಕಾರಗಳು ಕೂಡಲೇ ಮಧ್ಯಪ್ರವೇಶಿಸಿ ನ್ಯಾಯ ಒದಗಿಸಬೇಕು. ಇಲ್ಲವಾದಲ್ಲಿ ರೈತರು ಮತ್ತು ಅಡಿಕೆ ಬೆಳೆಗಾರರ ಪರವಾಗಿ ರಾಜ್ಯಾದ್ಯಂತ ಉಗ್ರ ಹೋರಾಟ ಹಮ್ಮಿಕೊಳ್ಳುವುದರ ಜೊತೆಗೆ ಪ್ರಜಾಸತ್ತಾತ್ಮಕ ಹೋರಾಟದ ಎಲ್ಲ ಮಾರ್ಗಗಳನ್ನು ಅನುಸರಿಸಲಾಗುವುದು ಎಂದು ಶಾಸಕ ಶಿವರಾಮ ಹೆಬ್ಬಾರ್ ಎಚ್ಚರಿಕೆ ನೀಡಿದ್ದಾರೆ.

Related News

error: Content is protected !!