ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆನೇಕಲ್ ತಾಲ್ಲೂಕಿನ ಸರ್ಜಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಹಿಳೆಯರನ್ನು ಮೋಸಗೊಳಿಸಿ ದೈಹಿಕ ಸಂಪರ್ಕ ಬೆಳೆಸಿ, ಅದರ ವಿಡಿಯೊಗಳನ್ನು ಬಳಸಿಕೊಂಡು ಬೆದರಿಕೆ ಹಾಕುತ್ತಿದ್ದಾನೆ ಎಂಬ ಆರೋಪದಡಿ ರಾಕೇಶ್ ಎಂಬಾತನ ವಿರುದ್ಧ ಪ್ರಕರಣ ದಾಖಲಾಗಿದೆ.
ಪೊಲೀಸರ ಮಾಹಿತಿ ಪ್ರಕಾರ, ಆರೋಪಿ ಮೊದಲಿಗೆ ಸಭ್ಯ ವ್ಯಕ್ತಿಯಂತೆ ನಡೆದುಕೊಂಡು ಮಹಿಳೆಯರ ವಿಶ್ವಾಸ ಗಳಿಸುತ್ತಿದ್ದ ಎನ್ನಲಾಗಿದೆ. ಬಳಿಕ ಅವರೊಂದಿಗೆ ಆಪ್ತ ಸಂಬಂಧ ಬೆಳೆಸಿ, ಖಾಸಗಿ ಕ್ಷಣಗಳನ್ನು ವಿಡಿಯೊವಾಗಿ ದಾಖಲಿಸಿ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದಾನೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಈತನಿಗೆ ಸುಮಾರು 18 ಮಹಿಳೆಯರೊಂದಿಗೆ ಸಂಪರ್ಕವಿದ್ದು, ಅನೇಕ ಮದುವೆಗಳನ್ನೂ ಮಾಡಿಕೊಂಡಿದ್ದಾನೆ ಎಂಬ ವಿಚಾರ ತನಿಖೆಯಲ್ಲಿ ಹೊರಬಂದಿದೆ ಎಂದು ಹೇಳಲಾಗಿದೆ.
ಇದೇ ವೇಳೆ, ಹೆಬ್ಬಗೋಡಿ ಮೂಲದ ಭವ್ಯ ಎಂಬ ಯುವತಿಯನ್ನು ಫೆಬ್ರವರಿ 22ರಂದು ವಿವಾಹವಾಗಿದ್ದ ರಾಕೇಶ್, ಮದುವೆಯಾದ ಕೆಲವೇ ದಿನಗಳಲ್ಲಿ ಒಂದು ಕೋಟಿ ರೂಪಾಯಿ ವರದಕ್ಷಿಣೆ ತರುವಂತೆ ಪತ್ನಿಗೆ ಕಿರುಕುಳ ನೀಡಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಪತ್ನಿಗೆ ರಾಕೇಶ್‌ನ ಹಿಂದಿನ ಸಂಬಂಧಗಳು ಮತ್ತು ಆರೋಪಿತ ವಿಡಿಯೊಗಳ ಬಗ್ಗೆ ಮಾಹಿತಿ ಸಿಕ್ಕ ನಂತರ, ಆಕೆಯ ಮೇಲೆ ಪೆಟ್ರೋಲ್ ಸುರಿದು ಕೊಲೆ ಮಾಡಲು ಯತ್ನಿಸಿದ್ದಾನೆ ಎಂಬ ಆರೋಪವೂ ಕೇಳಿಬಂದಿದೆ.
ಈ ಕುರಿತು ಸರ್ಜಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ವರದಕ್ಷಿಣೆ ಕಿರುಕುಳ, ಜೀವ ಬೆದರಿಕೆ ಸೇರಿದಂತೆ ವಿವಿಧ ಆರೋಪಗಳಡಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ವಿಡಿಯೊಗಳನ್ನೂ ಪೊಲೀಸರು ಪರಿಶೀಲಿಸುತ್ತಿದ್ದಾರೆ ಎಂದು ತಿಳಿದುಬಂದಿದೆ.
