ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಕೃತ್ಯ ನಡೆದಿರುವ ಶಂಕೆ – ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ರವಾನೆ

ಗೌರಿಬಿದನೂರು: ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಮಲ್ಲೇನಹಳ್ಳಿ ಗ್ರಾಮದಲ್ಲಿ ತಾಯಿ ಹಾಗೂ ಇಬ್ಬರು ಪುಟ್ಟ ಮಕ್ಕಳು ವಿಷ ಸೇವಿಸಿ ಗಂಭೀರವಾಗಿ ಅಸ್ವಸ್ಥಗೊಂಡಿರುವ ಆಘಾತಕಾರಿ ಘಟನೆ ನಡೆದಿದೆ. ತಾಯಿ ಸೇರಿದಂತೆ ಇಬ್ಬರು ಮಕ್ಕಳ ಆರೋಗ್ಯ ಸ್ಥಿತಿ ಚಿಂತಾಜನಕವಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಲ್ಲೇನಹಳ್ಳಿ ಗ್ರಾಮದ ಶೈಲಾ ಎಂಬ ಮಹಿಳೆ ತನ್ನ ಆರು ವರ್ಷದ ಮಗ ವೇದಾಂತ್ ಹಾಗೂ ನಾಲ್ಕು ವರ್ಷದ ಮಗ ತೇಜಸ್‌ಗೆ ವಿಷ ನೀಡಿದ ಬಳಿಕ ತಾನೂ ವಿಷ ಸೇವಿಸಿರುವ ಶಂಕೆ ವ್ಯಕ್ತವಾಗಿದೆ. ಕುಟುಂಬದಲ್ಲಿನ ಕೌಟುಂಬಿಕ ಕಲಹವೇ ಈ ಘಟನೆಗೆ ಕಾರಣವಾಗಿರಬಹುದು ಎಂದು ಪ್ರಾಥಮಿಕವಾಗಿ ಶಂಕಿಸಲಾಗಿದ್ದು, ಘಟನೆಯ ಹಿಂದಿನ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ.

ಘಟನೆ ತಿಳಿಯುತ್ತಿದ್ದಂತೆ ಅಸ್ವಸ್ಥಗೊಂಡಿದ್ದ ಮೂವರನ್ನು ತಕ್ಷಣ ಗೌರಿಬಿದನೂರು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಕಳುಹಿಸಲಾಗಿದೆ ಎನ್ನಲಾಗಿದೆ. ಮತ್ತೊಂದೆಡೆ, ನಾಲ್ಕು ವರ್ಷದ ತೇಜಸ್‌ನನ್ನು ತಂದೆ ಹನುಮಂತರಾಯಪ್ಪ ಅವರು ಚಿಕ್ಕಬಳ್ಳಾಪುರ ಆಸ್ಪತ್ರೆಗೆ ಕರೆದೊಯ್ದಿದ್ದಾರೆ ಎಂಬ ಮಾಹಿತಿಯೂ ಲಭ್ಯವಾಗಿದೆ.

ತಾಯಿ ಶೈಲಾ ಹಾಗೂ ಇಬ್ಬರು ಮಕ್ಕಳು ಗಂಭೀರ ಸ್ಥಿತಿಯಲ್ಲಿರುವುದರಿಂದ ಕುಟುಂಬಸ್ಥರು ತೀವ್ರ ಆತಂಕದಲ್ಲಿದ್ದಾರೆ. ಘಟನೆಯ ಸುದ್ದಿ ಗ್ರಾಮದಲ್ಲಿ ಹರಡುತ್ತಿದ್ದಂತೆ ಮಲ್ಲೇನಹಳ್ಳಿಯಲ್ಲಿ ದುಃಖ ಹಾಗೂ ಆತಂಕದ ವಾತಾವರಣ ನಿರ್ಮಾಣವಾಗಿದೆ.

ಕೌಟುಂಬಿಕ ಕಲಹವೇ ಈ ಘಟನೆಗೆ ಕಾರಣವೇ? ವಿಷ ಸೇವಿಸುವ ಮುನ್ನ ಕುಟುಂಬದಲ್ಲಿ ಏನಾದರೂ ಘಟನೆ ನಡೆದಿತ್ತೇ? ಎಂಬ ಹಲವು ಪ್ರಶ್ನೆಗಳು ಇದೀಗ ಮೂಡಿವೆ. ಈ ಸಂಬಂಧ ಗೌರಿಬಿದನೂರು ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಪೊಲೀಸರು ಮಾಹಿತಿ ಸಂಗ್ರಹಿಸುತ್ತಿದ್ದು, ತನಿಖೆಯ ನಂತರವಷ್ಟೇ ಘಟನೆಯ ಸಂಪೂರ್ಣ ವಿವರ ತಿಳಿದುಬರಬೇಕಿದೆ.

ವರದಿ: ಅವಿನಾಶ್, ಗೌರಿಬಿದನೂರು
ಚಿಕ್ಕಬಳ್ಳಾಪುರ ಜಿಲ್ಲೆ

Related News

error: Content is protected !!