ಬಾಗಲಕೋಟೆ: ಸುಮಾರು 20 ವರ್ಷಗಳ ಹಿಂದೆ ಭೂಸ್ವಾಧೀನಪಡಿಸಿಕೊಂಡ ಜಮೀನಿಗೆ ಇನ್ನೂ ಪರಿಹಾರ ನೀಡದೇ ರೈತನನ್ನು ಅಲೆದಾಡಿಸಿರುವ ಆರೋಪದ ಹಿನ್ನೆಲೆಯಲ್ಲಿ ಕರ್ನಾಟಕ ಲೋಕಾಯುಕ್ತರು ಸ್ವಯಂಪ್ರೇರಿತವಾಗಿ ದೂರು ದಾಖಲಿಸಿಕೊಂಡು ಬಾಗಲಕೋಟೆಯ ಐವರು ಅಧಿಕಾರಿಗಳಿಗೆ ಸಮನ್ಸ್ ಜಾರಿಗೊಳಿಸಿದ್ದಾರೆ.

ಉಪಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ಅವರು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ಸಂಬಂಧಿತ ಅಧಿಕಾರಿಗಳ ವಿರುದ್ಧ ಕರ್ತವ್ಯಲೋಪದ ಆರೋಪದ ಕುರಿತು ವಿವರವಾದ ವರದಿ ಸಲ್ಲಿಸುವಂತೆ ಸೂಚಿಸಿದ್ದಾರೆ. ಜೊತೆಗೆ ಜುಲೈ 27ರಂದು ನಡೆಯಲಿರುವ ವಿಚಾರಣೆಗೆ ಖುದ್ದಾಗಿ ಹಾಜರಾಗುವಂತೆ ಆದೇಶಿಸಿದ್ದಾರೆ.

ಮಾಹಿತಿಯ ಪ್ರಕಾರ, ಬಾಗಲಕೋಟೆ ನಗರದಲ್ಲಿ ಮುಳುಗಡೆ ಸಂತ್ರಸ್ತರ ಪುನರ್ವಸತಿಗಾಗಿ ಬಾಗಲಕೋಟೆ ನಗರಾಭಿವೃದ್ಧಿ ಪ್ರಾಧಿಕಾರವು ಸುಮಾರು 20 ವರ್ಷಗಳ ಹಿಂದೆ ರೈತ ಬಸವರಾಜ್ ದೊಡ್ಡಮನಿ ಅವರ 4 ಎಕರೆ ಜಮೀನನ್ನು ಸ್ವಾಧೀನಪಡಿಸಿಕೊಂಡಿತ್ತು. ಆದರೆ, ಇಷ್ಟು ವರ್ಷಗಳಾದರೂ ಸಂಪೂರ್ಣ ಭೂ ಪರಿಹಾರವನ್ನು ನೀಡದೆ ಅಧಿಕಾರಿಗಳು ನಿರ್ಲಕ್ಷ್ಯ ತೋರಿದ್ದಾರೆ ಎನ್ನಲಾಗಿದೆ.

ರೈತ ಬಸವರಾಜ್ ದೊಡ್ಡಮನಿ ಅವರು ಪರಿಹಾರಕ್ಕಾಗಿ ಹಲವು ಬಾರಿ ಕಚೇರಿಗಳಿಗೆ ಅಲೆದಾಡಿ ಮನವಿ ಸಲ್ಲಿಸಿದ್ದರೂ ಯಾವುದೇ ಸ್ಪಂದನೆ ದೊರಕಿಲ್ಲ. ಪ್ರತಿಭಟನೆ ನಡೆಸಿದರೂ ಸಮಸ್ಯೆಗೆ ಪರಿಹಾರ ಸಿಗದ ಹಿನ್ನೆಲೆಯಲ್ಲಿ ಅಸಮಾಧಾನಗೊಂಡ ರೈತರು ಅಧಿಕಾರಿಯೊಬ್ಬರಿಗೆ ಚಪ್ಪಲಿಯಿಂದ ಹೊಡೆದ ಘಟನೆ ಕೂಡ ನಡೆದಿತ್ತು. ಈ ಬೆಳವಣಿಗೆಯನ್ನು ಲೋಕಾಯುಕ್ತರು ಗಂಭೀರವಾಗಿ ಪರಿಗಣಿಸಿದ್ದಾರೆ.

ಪ್ರಕರಣದ ವಿಚಾರಣೆ ವೇಳೆ ಉಪಲೋಕಾಯುಕ್ತರು ಅಧಿಕಾರಿಗಳ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ರೈತನಿಗೆ ನ್ಯಾಯಯುತವಾಗಿ ಸಿಗಬೇಕಾದ ಪರಿಹಾರವನ್ನು ನೀಡದಿರುವುದು ಕರ್ತವ್ಯಲೋಪ, ದುರಾಡಳಿತ ಹಾಗೂ ಭ್ರಷ್ಟಾಚಾರದ ಸೂಚಕವಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಜೊತೆಗೆ ಸಂವಿಧಾನದ ವಿಧಿ 14, 21 ಹಾಗೂ 300ಎ ಅಡಿಯಲ್ಲಿ ನಾಗರಿಕರಿಗೆ ದೊರೆಯುವ ಹಕ್ಕುಗಳ ಉಲ್ಲಂಘನೆಯಾಗಿರುವ ಸಾಧ್ಯತೆಯನ್ನೂ ಉಲ್ಲೇಖಿಸಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ 25 ವರ್ಷಗಳಲ್ಲಿ ಎಷ್ಟು ಎಕರೆ ಭೂಸ್ವಾಧೀನ ಮಾಡಲಾಗಿದೆ, ಎಷ್ಟು ಫಲಾನುಭವಿಗಳಿಗೆ ಪರಿಹಾರ ನೀಡಲಾಗಿದೆ, ಎಷ್ಟು ಅರ್ಜಿಗಳು ಬಾಕಿ ಇವೆ, ಎಷ್ಟು ನಿವೇಶನಗಳು ಪ್ರಾಧಿಕಾರದ ವಶದಲ್ಲಿವೆ ಹಾಗೂ ಎಷ್ಟು ಫಲಾನುಭವಿಗಳಿಗೆ ಹಕ್ಕುಪತ್ರ ವಿತರಿಸಲಾಗಿದೆ ಎಂಬ ಮಾಹಿತಿಯನ್ನು ಲೋಕಾಯುಕ್ತರು ಕೇಳಿದ್ದಾರೆ.

ನಗರ ಯೋಜನಾ ಸದಸ್ಯರು, ಸಹಾಯಕ ಕಾರ್ಯಪಾಲಕ ಅಭಿಯಂತರರು, ವಿಷಯ ನಿರ್ವಾಹಕರು, ವಿಶೇಷ ಭೂಸ್ವಾಧೀನಾಧಿಕಾರಿ, ಪುನರ್ವಸತಿ ಅಧಿಕಾರಿ ಹಾಗೂ ಬಾಗಲಕೋಟೆ ತಹಶೀಲ್ದಾರ್ ಸೇರಿದಂತೆ ಸಂಬಂಧಿತ ಅಧಿಕಾರಿಗಳಿಗೆ ಜುಲೈ 27ರಂದು ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿಯಾಗಿದೆ.

ಈ ಆದೇಶದ ಪ್ರತಿಯನ್ನು ನಗರಾಭಿವೃದ್ಧಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ, ಜಿಲ್ಲಾಧಿಕಾರಿ ಹಾಗೂ ಸಂಬಂಧಿತ ಸಚಿವರಿಗೂ ಮಾಹಿತಿ ಮತ್ತು ಅಗತ್ಯ ಕ್ರಮಕ್ಕಾಗಿ ರವಾನಿಸಲಾಗಿದೆ.

Related News

error: Content is protected !!