ಸಿದ್ದಾಪುರ: ತಾಲೂಕಿನ ಕಾನಸೂರಿನ ಗಟ್ಟಿಕೈ ಕ್ರಾಸ್ ಬಳಿ, ಇಂದಿರಾಗಾಂಧಿ ವಸತಿ ಶಾಲೆಯ ವಿದ್ಯಾರ್ಥಿ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ವಿದ್ಯಾರ್ಥಿಯ ಶವವನ್ನು ಆಂಬುಲೆನ್ಸ್‌ನಲ್ಲಿ ಇರಿಸಿಕೊಂಡು ನೂರಾರು ಸಾರ್ವಜನಿಕರು ಪ್ರತಿಭಟನೆ ನಡೆಸಿದರು.
ನೆನ್ನೆ ಕಾನಸೂರಿನ ಇಂದಿರಾಗಾಂಧಿ ವಸತಿ ಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿ ಗೋಕುಲ ಕೃಷ್ಣ ಗೌಡ (15) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿತ್ತು. ಮೃತ ವಿದ್ಯಾರ್ಥಿ ಸಿದ್ದಾಪುರ ತಾಲೂಕಿನ ಹಾರ್ಸಿಕಟ್ಟಾ ಹುತಗಾರ ನಿವಾಸಿ ಎಂದು ತಿಳಿದು ಬಂದಿದೆ. ಶಾಲೆಯ ಬಟ್ಟೆ ಒಣಗಿಸುವ ಕೋಣೆಯಲ್ಲಿ ವಿದ್ಯಾರ್ಥಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಆದರೆ, ವಿದ್ಯಾರ್ಥಿಯ ಸಾವಿನ ಬಗ್ಗೆ ಹಲವು ಅನುಮಾನಗಳು ವ್ಯಕ್ತವಾಗಿದ್ದು, ಘಟನೆಯ ನಿಖರ ಸತ್ಯಾಂಶ ಹೊರಬರಬೇಕೆಂದು ಕುಟುಂಬಸ್ಥರು ಹಾಗೂ ಸಾರ್ವಜನಿಕರು ಒತ್ತಾಯಿಸಿದ್ದಾರೆ. ವಿದ್ಯಾರ್ಥಿ ಯಾವ ಪರಿಸ್ಥಿತಿಯಲ್ಲಿ ಸಾವನ್ನಪ್ಪಿದ್ದಾನೆ ಎಂಬುದನ್ನು ತಿಳಿಯಲು, ಶಾಲೆಯ ಆವರಣದಲ್ಲಿದ್ದ ಸಿಸಿಟಿವಿ ದೃಶ್ಯಾವಳಿಯನ್ನು (CCTV ಫೂಟೇಜ್) ಬಹಿರಂಗಪಡಿಸಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆ ವೇಳೆ ಮೃತ ವಿದ್ಯಾರ್ಥಿಯ ಶವವನ್ನು ಆಂಬುಲೆನ್ಸ್‌ನಲ್ಲಿ ಇರಿಸಿಕೊಂಡು ಸಾರ್ವಜನಿಕರು ನ್ಯಾಯಕ್ಕಾಗಿ ಧರಣಿ ನಡೆಸಿದರು. ಘಟನೆಗೆ ಸಂಬಂಧಿಸಿದಂತೆ ಪಾರದರ್ಶಕ ತನಿಖೆ ನಡೆಸಿ, ಸತ್ಯಾಸತ್ಯತೆ ಹೊರತರುವಂತೆ ಒತ್ತಾಯಿಸಿದರು.
ಪ್ರತಿಭಟನೆ ನಡೆಯುತ್ತಿದ್ದ ಸ್ಥಳಕ್ಕೆ ಸಿದ್ದಾಪುರ ಪೊಲೀಸ್ ಠಾಣೆಯ ಸಿಪಿಐ ಸೀತಾರಾಮ್, ಪಿಎಸ್ಐ ನಾಗಪ್ಪ, ಶಿರಸಿ ಗ್ರಾಮೀಣ ಪೊಲೀಸ್ ಠಾಣೆಯ ಪಿಎಸ್ಐ ಸಂತೋಷ್ ಕುಮಾರ್ ಸೇರಿದಂತೆ ಹತ್ತಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ಭೇಟಿ ನೀಡಿ ಪರಿಸ್ಥಿತಿಯನ್ನು ನಿಯಂತ್ರಿಸುವ ಕಾರ್ಯದಲ್ಲಿ ತೊಡಗಿದ್ದರು.
ಅಲ್ಲದೆ, ಸಿದ್ದಾಪುರ ತಹಶೀಲ್ದಾರ್ ರಮೇಶ್ ಹೆಗಡೆ ಸ್ಥಳಕ್ಕೆ ಆಗಮಿಸಿ ಮೃತ ವಿದ್ಯಾರ್ಥಿಯ ಕುಟುಂಬಸ್ಥರು ಹಾಗೂ ಪ್ರತಿಭಟನಾನಿರತರೊಂದಿಗೆ ಮಾತುಕತೆ ನಡೆಸಿದರು. ಸಿಸಿಟಿವಿ ದೃಶ್ಯಾವಳಿಯನ್ನು ಪರಿಶೀಲಿಸಿ ಪ್ರಕರಣದ ಸಂಪೂರ್ಣ ಸತ್ಯಾಂಶವನ್ನು ಬಹಿರಂಗಪಡಿಸಬೇಕು ಹಾಗೂ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಆಗ್ರಹಿಸಿದರು.
ಪ್ರಕರಣದ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದು, ವಿದ್ಯಾರ್ಥಿಯ ಸಾವಿನ ಹಿಂದಿನ ನಿಜವಾದ ಕಾರಣವೇನು ಎಂಬುದು ತನಿಖೆಯ ಬಳಿಕವೇ ತಿಳಿಯಬೇಕಿದೆ.
ವರದಿ: ಮಂಜುನಾಥ ಮೊಗೇರ್

Related News

error: Content is protected !!