ಗದಗ: ನಗರದ ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ (RDPR) ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯೊಬ್ಬರು ಹಾಸ್ಟೆಲ್ನಲ್ಲಿ ಮೃತಪಟ್ಟಿರುವ ಘಟನೆ ಹಲವು ಅನುಮಾನಗಳಿಗೆ ಕಾರಣವಾಗಿದೆ. ಬಾಗಲಕೋಟೆ ಜಿಲ್ಲೆಯ ಗದ್ದನಕೇರಿ ಮೂಲದ 25 ವರ್ಷದ ವೀಣಾ ಹಾನಾಪುರ ಅವರು ಹಾಸ್ಟೆಲ್ ಕೊಠಡಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ವೀಣಾ ಅವರು ವಿಶ್ವವಿದ್ಯಾಲಯದಲ್ಲಿ ಮಾಸ್ಟರ್ ಆಫ್ ಪಬ್ಲಿಕ್ ಹೆಲ್ತ್ (MPH) ವ್ಯಾಸಂಗ ಮಾಡುತ್ತಿದ್ದರು. ಘಟನೆ ಕುರಿತು ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಗದಗದ ಜಿಮ್ಸ್ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಿದ್ದಾರೆ.
ಇನ್ನೊಂದೆಡೆ, ವೀಣಾ ಅವರ ಸಾವಿನ ಕುರಿತು ಕುಟುಂಬಸ್ಥರು ಹಲವು ಅನುಮಾನಗಳನ್ನು ವ್ಯಕ್ತಪಡಿಸಿದ್ದಾರೆ. ಮೃತದೇಹ ಪತ್ತೆಯಾದಾಗ ಕಾಲು ನೆಲಕ್ಕೆ ತಾಗುವ ಸ್ಥಿತಿಯಲ್ಲಿದ್ದವು. ಅಲ್ಲದೆ, ನೇಣು ಬಿಗಿಯಲು ಬಳಸಿರುವ ಬಟ್ಟೆ ತಮ್ಮ ಮಗಳಿಗೆ ಸೇರಿದ್ದಲ್ಲ ಎಂದು ಪೋಷಕರು ಆರೋಪಿಸಿದ್ದಾರೆ. ಮೃತಳ ಮುಖದ ಮೇಲೆ ಗಾಯದ ಗುರುತುಗಳಿರುವುದರಿಂದ ಇದು ಆತ್ಮಹತ್ಯೆಯಲ್ಲ, ಬೇರೆ ಏನಾದರೂ ನಡೆದಿದೆ ಎಂಬ ಶಂಕೆ ವ್ಯಕ್ತಪಡಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಪ್ರಕರಣದ ಪ್ರತಿಯೊಂದು ಆಯಾಮವನ್ನೂ ಪರಿಶೀಲಿಸಿ, ಮಗಳ ಸಾವಿನ ಹಿಂದಿರುವ ನಿಜಾಂಶವನ್ನು ಬಹಿರಂಗಪಡಿಸಬೇಕು ಎಂದು ಪೋಷಕರು ಒತ್ತಾಯಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಎಲ್ಲಾ ಆಯಾಮಗಳಿಂದ ತನಿಖೆ ಮುಂದುವರಿಸಿದ್ದು, ಮರಣೋತ್ತರ ಪರೀಕ್ಷೆಯ ವರದಿ ಹಾಗೂ ತನಿಖೆಯ ಬಳಿಕ ಸಾವಿನ ನಿಖರ ಕಾರಣ ತಿಳಿದುಬರುವ ನಿರೀಕ್ಷೆಯಿದೆ.
