ನಂಜನಗೂಡು ತಾಲ್ಲೂಕಿನ ತಗಡೂರು ಗ್ರಾಮದ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ ಮತ್ತು ವಿಜ್ಞಾನ ಪಿಯು ಕಾಲೇಜಿನಲ್ಲಿ ಮೂಲಭೂತ ಸೌಕರ್ಯಗಳ ಕೊರತೆಯನ್ನು ಪ್ರಶ್ನಿಸಿ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆ ಕೊನೆಗೂ ಫಲವಿತ್ತು. ವಿದ್ಯಾರ್ಥಿಗಳ ಜೊತೆ ಪೋಷಕರು ಸಹ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರಿಂದ ಸರ್ಕಾರ ಗಮನ ಹರಿಸಬೇಕಾದ ಪರಿಸ್ಥಿತಿ ನಿರ್ಮಾಣವಾಯಿತು.

ಪ್ರತಿಭಟನೆಯ ಹಿನ್ನೆಲೆಯಲ್ಲಿ ಅಧಿಕಾರಿಗಳು ತಕ್ಷಣ ಸ್ಥಳಕ್ಕೆ ಧಾವಿಸಿ ಪರಿಸ್ಥಿತಿ ಪರಿಶೀಲನೆ ನಡೆಸಿ ವರದಿ ಸಲ್ಲಿಸಿದರು. ಇದರ ಮೇಲೆ ಕ್ರಮವಹಿಸಿರುವ ಸರ್ಕಾರ, ಕರ್ತವ್ಯ ಲೋಪ ಎಸಗಿರುವ ಹಿನ್ನೆಲೆಯಲ್ಲಿ ಶಾಲಾ ಪ್ರಾಂಶುಪಾಲೆ ವಸಂತಕುಮಾರಿ, ಪ್ರಭಾರ ನಿಲಯ ಪಾಲಕ ಮಹದೇವಪ್ಪ ಮತ್ತು ಗಣಿತ ಶಿಕ್ಷಕ ಮಂಜುನಾಥ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತು ಮಾಡುವಂತೆ ಆದೇಶಿಸಿದೆ.

ಇದೆ ವೇಳೆ, ವಿದ್ಯಾರ್ಥಿನಿಯರೊಂದಿಗೆ ಅಸಭ್ಯವಾಗಿ ವರ್ತನೆ ತೋರಿರುವುದು ಹಾಗೂ ಜಾತಿ ತಾರತಮ್ಯ ಮಾಡಿರುವ ಬಗ್ಗೆ ವಿದ್ಯಾರ್ಥಿಗಳಿಂದ ಬಂದ ದೂರುಗಳ ಹಿನ್ನೆಲೆಯಲ್ಲಿ, ವಿಜ್ಞಾನ ವಿಷಯದ ಅತಿಥಿ ಉಪನ್ಯಾಸಕ ಗುರುಸ್ವಾಮಿಯನ್ನು ಕರ್ತವ್ಯದಿಂದ ವಜಾ ಮಾಡುವಂತೆ ಕ್ರಮ ಕೈಗೊಳ್ಳಲಾಗಿದೆ. ಈ ಸಂಬಂಧ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಕಾರ್ಯನಿರ್ವಾಹಕ ನಿರ್ದೇಶಕ ಪಿ.ಎಸ್. ಕಾಂತರಾಜು ಅಧಿಕೃತ ಆದೇಶ ಹೊರಡಿಸಿದ್ದಾರೆ.

ಶಾಲೆಯಲ್ಲಿ ನಡೆದ ಈ ಘಟನೆ ಸ್ಥಳೀಯರಲ್ಲಿ ಆಕ್ರೋಶ ಹುಟ್ಟುಹಾಕಿದ್ದು, ವಸತಿ ಶಾಲೆಗಳ ಕಾರ್ಯವಿಧಾನ ಹಾಗೂ ಶಿಕ್ಷಕರ ನೈತಿಕ ಹೊಣೆಗಾರಿಕೆ ಬಗ್ಗೆ ಚರ್ಚೆಗೆ ಗ್ರಾಸವಾಗಿದೆ.

Related News

error: Content is protected !!