ಹಾವೇರಿ ಜಿಲ್ಲೆಯ ಆಡೂರು ಪೊಲೀಸ್ ಠಾಣೆ ವ್ಯಾಪ್ತಿಯ ನರೇಗಲ್ ಗ್ರಾಮದಲ್ಲಿ ಕಾರ ಹುಣ್ಣಿಮೆ ಸಂಭ್ರಮದ ವೇಳೆ ಎರಡು ಸಮುದಾಯಗಳ ನಡುವೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ಘರ್ಷಣೆಯಲ್ಲಿ ಹಲವರು ಗಾಯಗೊಂಡಿದ್ದಾರೆ.

ಮಾಹಿತಿಯ ಪ್ರಕಾರ, ಹೋರಿ ಸ್ಪರ್ಧೆ ನಡೆಯುತ್ತಿದ್ದ ಸಂದರ್ಭದಲ್ಲಿ ಕೆಲವರ ನಡುವೆ ವಾಗ್ವಾದ ಉಂಟಾಗಿ ಅದು ಘರ್ಷಣೆಗೆ ತಿರುಗಿದೆ ಎನ್ನಲಾಗಿದೆ. ಈ ವೇಳೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆದಿರುವ ಆರೋಪ ಕೇಳಿಬಂದಿದ್ದು, ಲೋಹಿತ್, ನಾಗಪ್ಪ, ನಿಂಗರಾಜ್, ಜಯಪ್ಪ, ಶಿವರಾಜ್ ಹಾಗೂ ಮಲ್ಲಪ್ಪ ಎಂಬುವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಗಾಯಾಳುಗಳನ್ನು ಮೊದಲಿಗೆ ಹಾವೇರಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದ್ದು, ಬಳಿಕ ಹೆಚ್ಚಿನ ಚಿಕಿತ್ಸೆಗೆ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ.

ಘಟನೆಯ ಮಾಹಿತಿ ತಿಳಿದ ತಕ್ಷಣ ಆಡೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. ಸದ್ಯ ನರೇಗಲ್ ಗ್ರಾಮದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದ್ದು, ಪರಿಸ್ಥಿತಿ ಉದ್ವಿಗ್ನವಾಗಿದ್ದರೂ ನಿಯಂತ್ರಣದಲ್ಲಿದೆ.

ಘರ್ಷಣೆಗೆ ನಿಖರ ಕಾರಣವೇನು ಎಂಬುದರ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.

error: Content is protected !!