
ಭಟ್ಕಳ:ಮಹಿಳೆಯೊಬ್ಬರಿಗೆ ಕಿರುಕುಳ ನೀಡಿ, ಅವರ ಖಾಸಗಿ ವಿಡಿಯೋಗಳನ್ನು ಚಿತ್ರೀಕರಿಸಿ ದುರುಪಯೋಗಪಡಿಸಿಕೊಂಡ ಪ್ರಕರಣದಲ್ಲಿ ಆರೋಪಿಗೆ ನ್ಯಾಯಾಲಯ ಆರು ತಿಂಗಳ ಜೈಲು ಶಿಕ್ಷೆ ಹಾಗೂ ₹5,000 ದಂಡ ವಿಧಿಸಿ ಮಹತ್ವದ ತೀರ್ಪು ನೀಡಿದೆ.
ಉತ್ತರ ಕನ್ನಡ ಜಿಲ್ಲೆಯ ಮುರ್ಡೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿತ್ತು. ಭಟ್ಕಳ ತಾಲೂಕಿನ ನಿವಾಸಿ ಆಂಟೋನಿ (30), ತಂದೆ ಜೋಸೆಫ್ ಎಂಬಾತ ಮಹಿಳೆಯೊಬ್ಬರಿಗೆ ಕಿರುಕುಳ ನೀಡುವುದರ ಜೊತೆಗೆ ಅವರ ಖಾಸಗಿ ವಿಡಿಯೋಗಳನ್ನು ಚಿತ್ರೀಕರಿಸಿ ದುರುಪಯೋಗಪಡಿಸಿಕೊಂಡಿದ್ದ ಆರೋಪ ಎದುರಿಸುತ್ತಿದ್ದ.
ಈ ಸಂಬಂಧ ಮುರ್ಡೇಶ್ವರ ಪೊಲೀಸ್ ಠಾಣೆಯಲ್ಲಿ 2023ರಲ್ಲಿ ಗುನ್ನಾ ನಂ. 97/2023ರ ಅಡಿಯಲ್ಲಿ ಐಪಿಸಿ ಕಲಂ 354(ಎ), 354(ಡಿ), 509 ಹಾಗೂ ಮಾಹಿತಿ ತಂತ್ರಜ್ಞಾನ ಕಾಯ್ದೆ-2000ರ ಕಲಂ 67ರ ಪ್ರಕಾರ ಪ್ರಕರಣ ದಾಖಲಿಸಲಾಗಿತ್ತು.
ಸಮಗ್ರ ತನಿಖೆ ನಡೆಸಿ ದೋಷಾರೋಪಣಾ ಪತ್ರ ಸಲ್ಲಿಕೆ
ಪ್ರಕರಣದ ತನಿಖೆ ಕೈಗೊಂಡಿದ್ದ ಅಂದಿನ ಮುರ್ಡೇಶ್ವರ ವೃತ್ತದ ಸಿಪಿಐ ಸಂತೋಷ್ ಕಾಯ್ಕಿಣಿ ಅವರು ಸಮಗ್ರ ತನಿಖೆ ನಡೆಸಿ, ಅಗತ್ಯ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿದ್ದರು. ಬಳಿಕ ಆರೋಪಿತನ ವಿರುದ್ಧ ಭಟ್ಕಳದ ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರ ಸಲ್ಲಿಸಿದ್ದರು.
ಭಟ್ಕಳದ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್ಸಿ ನ್ಯಾಯಾಲಯದಲ್ಲಿ ಸಿಸಿ ನಂ. 567/2024ರ ಅಡಿಯಲ್ಲಿ ಪ್ರಕರಣದ ವಿಚಾರಣೆ ನಡೆಯಿತು. ವಿಚಾರಣೆ ವೇಳೆ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ನ್ಯಾಯಾಧೀಶರಾದ ರೂಪಶ್ರೀ ಅವರು ಆಂಟೋನಿಗೆ ಆರು ತಿಂಗಳ ಜೈಲು ಶಿಕ್ಷೆ ಹಾಗೂ ₹5,000 ದಂಡ ವಿಧಿಸಿ ಆದೇಶ ಹೊರಡಿಸಿದ್ದಾರೆ.
ಪ್ರಕರಣದ ಯಶಸ್ಸಿಗೆ ಪೊಲೀಸ್ ಸಿಬ್ಬಂದಿಗಳ ಕಾರ್ಯವೈಖರಿಗೆ ಮೆಚ್ಚುಗೆ
ನ್ಯಾಯಾಲಯದಲ್ಲಿ ಸಹಾಯಕ ಸರ್ಕಾರಿ ಅಭಿಯೋಜಕಿ ಪುಟ್ಟಲಕ್ಷ್ಮಿ ಅವರು ಸಮರ್ಥವಾಗಿ ವಾದ ಮಂಡಿಸಿದ್ದರು. ತನಿಖೆಗೆ ಸಹಕಾರ ನೀಡಿದ ಸಿಎಚ್ಸಿ-1188 ಸುಬ್ರಹ್ಮಣ್ಯ, ಸಿಪಿಸಿ-767 ಸಿದ್ದಪ್ಪ ಹಾಗೂ ನ್ಯಾಯಾಲಯದ ಕರ್ತವ್ಯ ನಿರ್ವಹಿಸಿದ ಮಹಿಳಾ ಎಚ್ಸಿ-1601 ವನಿತಾ ಅವರು ಉತ್ತಮವಾಗಿ ಕಾರ್ಯನಿರ್ವಹಿಸಿದ್ದರು.
ಪ್ರಕರಣದಲ್ಲಿ ಆರೋಪಿಗೆ ಶಿಕ್ಷೆಯಾಗುವಲ್ಲಿ ಪ್ರಮುಖ ಪಾತ್ರ ವಹಿಸಿದ ತನಿಖಾಧಿಕಾರಿ ಸೇರಿದಂತೆ ಎಲ್ಲಾ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ಕರ್ತವ್ಯವನ್ನು ಉತ್ತರ ಕನ್ನಡ ಜಿಲ್ಲಾ ಪೊಲೀಸ್ ಇಲಾಖೆ ಅಭಿನಂದಿಸಿದೆ.
ಮಹಿಳೆಯರಿಗೆ ಪೊಲೀಸ್ ಇಲಾಖೆಯ ಮನವಿ
ಮಹಿಳೆಯರ ಮೇಲೆ ನಡೆಯುವ ಕಿರುಕುಳ, ಬೆದರಿಕೆ ಹಾಗೂ ಸಾಮಾಜಿಕ ಜಾಲತಾಣಗಳ ಮೂಲಕ ಖಾಸಗಿ ಫೋಟೋ ಮತ್ತು ವಿಡಿಯೋಗಳನ್ನು ದುರುಪಯೋಗಪಡಿಸಿಕೊಳ್ಳುವ ಪ್ರಕರಣಗಳನ್ನು ಪೊಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸುತ್ತದೆ.
ಇಂತಹ ಘಟನೆಗಳಿಗೆ ಒಳಗಾದ ಮಹಿಳೆಯರು ಭಯಪಡದೆ ತಕ್ಷಣ ಸಮೀಪದ ಪೊಲೀಸ್ ಠಾಣೆಗೆ ದೂರು ನೀಡಬೇಕು ಎಂದು ಉತ್ತರ ಕನ್ನಡ ಜಿಲ್ಲಾ ಪೊಲೀಸ್ ಇಲಾಖೆ ಸಾರ್ವಜನಿಕರಲ್ಲಿ ಮನವಿ ಮಾಡಿದೆ.
ವರದಿ: ಮಂಜುನಾಥ್ ಮೊಗೇರ






