ಭಟ್ಕಳ: ಮನೆ ಬೀಗ ಮುರಿದು ಲಕ್ಷಾಂತರ ರೂಪಾಯಿ ಮೌಲ್ಯದ ಬಂಗಾರ ಹಾಗೂ ನಗದು ಕಳ್ಳತನ ಮಾಡಿದ್ದ ಇಬ್ಬರು ಆರೋಪಿಗಳನ್ನು ಕೇವಲ 8 ಗಂಟೆಯೊಳಗೆ ಬಂಧಿಸುವಲ್ಲಿ ಭಟ್ಕಳ ಶಹರ ಪೊಲೀಸರು ಯಶಸ್ವಿಯಾಗಿದ್ದಾರೆ.

ಭಟ್ಕಳದ ಪುರವರ್ಗ ನಿವಾಸಿಗಳಾದ ಮಹಮದ್ ರಾಹಿಲ್ ಮತ್ತು ನೌಶಾದ ಬಂಧಿತ ಆರೋಪಿಗಳಾಗಿದ್ದಾರೆ.

ಭಟ್ಕಳದ ಪುರವರ್ಗದಲ್ಲಿರುವ ದಿನಾಂಕ 18-05-2026ರ ಸಂಜೆ 5:40 ರಿಂದ ದಿನಾಂಕ 20-05-2026ರ ಬೆಳಿಗ್ಗೆ 8:00 ಗಂಟೆಯ ನಡುವಿನ ಅವಧಿಯಲ್ಲಿ ಮನೆಯವರು ಹೊರಗಡೆ ಹೋಗಿದ್ದ ಸಂದರ್ಭದಲ್ಲಿ ಈ ಕಳ್ಳತನ ನಡೆದಿತ್ತು. ಈ ಕುರಿತು ಭಟ್ಕಳ ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣ ದಾಖಲಾಗುತ್ತಿದ್ದಂತೆ ಎಚ್ಚೆತ್ತ ಪೊಲೀಸರು ಮೇಲಾಧಿಕಾರಿಗಳ ಮಾರ್ಗದರ್ಶನದಲ್ಲಿ ತಕ್ಷಣವೇ ವಿಶೇಷ ಪತ್ತೆ ತಂಡವನ್ನು ರಚಿಸಿದರು. ಖಚಿತ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿದ ತಂಡವು, ಪುರವರ್ಗದ ಹತ್ತಿರ ಇಬ್ಬರೂ ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಅವರು ಕಳ್ಳತನ ಮಾಡಿರುವುದನ್ನು ಒಪ್ಪಿಕೊಂಡಿದ್ದಾರೆ.

ಆರೋಪಿಗಳಿಂದ 2,21,000/- ರೂ. ಮೌಲ್ಯದ 17 ಗ್ರಾಂ ಬಂಗಾರದ ಆಭರಣ ಹಾಗೂ 22,860/- ರೂ. ನಗದು ಹಣವನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಸದ್ಯ ಆರೋಪಿಗಳನ್ನು ನಿಯಮಾನುಸಾರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಮಾನ್ಯ ನ್ಯಾಯಾಲಯವು ಅವರಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

ಉತ್ತರ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ದೀಪನ ಎಂ.ಎನ್., ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಎಂ. ಕೃಷ್ಣಮೂರ್ತಿ ಹಾಗೂ ಭಟ್ಕಳ ಉಪ-ವಿಭಾಗದ ಡಿವೈಎಸ್ಪಿ ಗಿರೀಶ ಬಿ. ಅವರ ಮಾರ್ಗದರ್ಶನದಲ್ಲಿ ಈ ಯಶಸ್ವಿ ಕಾರ್ಯಾಚರಣೆ ನಡೆದಿದೆ.
ಭಟ್ಕಳ ಶಹರ ಠಾಣೆಯ ಪೊಲೀಸ್ ನಿರೀಕ್ಷಕರಾದ ದಿವಾಕರ ಪಿ.ಎಂ. ನೇತೃತ್ವದಲ್ಲಿ, ಪಿಎಸ್ಐ ನವೀನ್ ಎಸ್. ನಾಯ್ಕ, ಸಿಬ್ಬಂದಿಗಳಾದ ದಿನೇಶ ನಾಯಕ , ಸತೀಶ ಭಟ್ಟ , ರವಿ ಪಟಗಾರ , ಜಗದೀಶ ನಾಯ್ಕ , ಕಿರಣ ಪಾಟೀಲ , ಕಾಶಿನಾಥ ಕೋಟಗುಣಸಿ , ಮಲ್ಲಿಕಾರ್ಜುನ ಉಟಗಿ ಮತ್ತು ವಿದ್ಯಾ ಆಚಾರಿ ಅವರು ಕೇವಲ 8 ಗಂಟೆಗಳಲ್ಲಿ ಕಳ್ಳರನ್ನು ಪತ್ತೆ ಹಚ್ಚುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ.

ಸಮರ್ಥವಾಗಿ ಹಾಗೂ ಅತ್ಯಂತ ವೇಗವಾಗಿ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಹೆಡೆಮುರಿಕಟ್ಟಿದ ಭಟ್ಕಳ ಶಹರ ಪೊಲೀಸ್ ಠಾಣೆಯ ಎಲ್ಲಾ ಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ ಜಿಲ್ಲಾ ಪೊಲೀಸ್ ಇಲಾಖೆ ಹಾಗೂ ಸಾರ್ವಜನಿಕ ವಲಯದಿಂದ ವ್ಯಾಪಕ ಶ್ಲಾಘನೆ ಮತ್ತು ಅಭಿನಂದನೆಗಳು ವ್ಯಕ್ತವಾಗಿವೆ.

Related News

error: Content is protected !!