
ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಸೆಕ್ಸ್ ಟಿಪ್ಸ್ ಹಾಗೂ ವಿಡಿಯೋಗಳನ್ನು ಹಂಚಿಕೊಳ್ಳುತ್ತಿದ್ದ ಮಹಿಳೆಯರನ್ನೇ ಗುರಿಯಾಗಿಸಿಕೊಂಡು, ಅವರ ಹೆಸರಿನಲ್ಲಿ ನಕಲಿ ಖಾತೆಗಳನ್ನು ಸೃಷ್ಟಿಸಿ ಹಣ ವಸೂಲಿ ಮಾಡುತ್ತಿದ್ದ ಆರೋಪಿಯನ್ನು ಬ್ಯಾಡರಹಳ್ಳಿ ಪೊಲೀಸರು ಬಂಧಿಸಿದ್ದಾರೆ.
ಮೈಸೂರು ಮೂಲದ ಆಕಾಶ್ ಬಂಧಿತ ಆರೋಪಿ. ಸಾಮಾಜಿಕ ಜಾಲತಾಣಗಳಲ್ಲಿ ಮಹಿಳೆಯರು ಹಂಚಿಕೊಳ್ಳುತ್ತಿದ್ದ ಟಿಪ್ಸ್ ಹಾಗೂ ವಿಡಿಯೋಗಳನ್ನು ದುರ್ಬಳಕೆ ಮಾಡಿಕೊಂಡು, ಅವರ ಹೆಸರಿನಲ್ಲಿ ನಕಲಿ ಖಾತೆಗಳನ್ನು ಸೃಷ್ಟಿಸುತ್ತಿದ್ದ ಎನ್ನಲಾಗಿದೆ.
ಬಳಿಕ ಆ ನಕಲಿ ಖಾತೆಗಳ ಮೂಲಕ ಇತರರೊಂದಿಗೆ ಚಾಟ್ ಮಾಡುತ್ತಿದ್ದ ಆರೋಪಿ, ಮಹಿಳೆಯರ ಹೆಸರಿನಲ್ಲಿ ಹಣಕ್ಕೆ ಬೇಡಿಕೆ ಇಡುತ್ತಿದ್ದ ಎಂಬ ಆರೋಪ ಕೇಳಿಬಂದಿದೆ. ಈ ರೀತಿ ಇಬ್ಬರು ಮಹಿಳೆಯರ ಹೆಸರಿನಲ್ಲಿ ಹಣ ವಸೂಲಿ ಮಾಡಿದ್ದಾನೆ ಎನ್ನಲಾಗಿದ್ದು, ಇನ್ನೂ ಹಲವು ಮಹಿಳೆಯರಿಂದ ಲಕ್ಷಾಂತರ ರೂಪಾಯಿ ದೋಚಿರುವ ಆರೋಪವೂ ಆತನ ಮೇಲಿದೆ.
ಈ ವಂಚನೆಗೆ ಸಂಬಂಧಿಸಿದಂತೆ ಸಂತ್ರಸ್ತ ಮಹಿಳೆಯರು ಬ್ಯಾಡರಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಕೈಗೊಂಡು, ಮೈಸೂರು ಮೂಲದ ಆಕಾಶ್ನನ್ನು ಬಂಧಿಸಿದ್ದಾರೆ.
ಸದ್ಯ ಆರೋಪಿಯನ್ನು ವಿಚಾರಣೆಗೆ ಒಳಪಡಿಸಿರುವ ಪೊಲೀಸರು, ನಕಲಿ ಖಾತೆಗಳ ಮೂಲಕ ಇನ್ನೆಷ್ಟು ಜನರಿಗೆ ವಂಚಿಸಲಾಗಿದೆ ಹಾಗೂ ಈ ಕೃತ್ಯದಲ್ಲಿ ಬೇರೆ ಯಾರಾದರೂ ಭಾಗಿಯಾಗಿದ್ದಾರೆಯೇ ಎಂಬ ಬಗ್ಗೆ ತನಿಖೆ ಮುಂದುವರಿಸಿದ್ದಾರೆ.






